The news is by your side.

ಸೆ.ನಲ್ಲಿ ಶಿಕ್ಷಕರ ವರ್ಗಾವಣೆ

ಬೆಂಗಳೂರು, ಆ. ೨೮- ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು ಬರುವ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು.

ವಿಧಾನಸೌಧದಲ್ಲಿಂದು ಶಿಕ್ಷಣ ಇಲಾಖೆಯ ಶಿಕ್ಷಕ ಮಿತ್ರ ಆಪ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಅತ್ಯಂತ ಪಾರದರ್ಶಕ ಹಾಗೂ ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿಯನ್ನು ರೂಪಿಸಲಾಗಿದೆ. ಬರುವ ಸೆಪ್ಟೆಂಬರ್‌ನಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗುತ್ತವೆ ಎಂದರು.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪರಿಷತ್ ಮಾದರಿಯಲ್ಲೇ ಶಿಕ್ಷಣ ಪರಿಷತ್‌ನ್ನು ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಇನ್ನು ಮುಂದೆ ಪದವಿಪೂರ್ವ ಪರೀಕ್ಷಾ ಮಂಡಳಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸಿ ಎರಡೂ ಪರೀಕ್ಷೆಗಳನ್ನು ಒಂದೆ ಮಂಡಳಿಯಿಂದ ನಡೆಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಉತ್ತಮ ಶಾಲೆಗಳನ್ನು ಗುರುತಿಸ ಪ್ರೋತ್ಸಾಹಿಸಲು ಪ್ರತಿ ಜಿಲ್ಲೆಯಲ್ಲಿ ಒಂದು ಉತ್ತಮ ಶಾಲೆಗೆ ಸ್ವಾಭಿಮಾನಿ ಶಾಲೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಹಾಗೆಯೇ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ ಆದರ್ಶ ಶಿಕ್ಷಕ ಗೌರವ ಸಲ್ಲಿಸಿ ಅವರ ಬೋಧನಾ ಕ್ರಮವನ್ನು ರಾಜ್ಯದ ಎಲ್ಲೆಡೆ ಶಾಲೆಗಳಿಗೆ ಪ್ರಚುರಪಡಿಸಲು ತೀರ್ಮಾನಿಸಲಾಗಿದೆ ಎಂದರು.

ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಈಗ ಪ್ರಕಟವಾಗಿದೆ. ರಾಜ್ಯದಲ್ಲೂ ಈ ನೀತಿಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದರು
ಈ ರಾಷ್ಟ್ರೀಯ ಶಿಕ್ಷಣ ನೀತಿ ರಾಷ್ಟ್ರೀಯತೆಯನ್ನು ಪುನರ್ ಜೀವನಗೊಳಿಸುವ ಜತೆಗೆ ವಿದ್ಯಾರ್ಥಿಗಳನ್ನು ಪರಿಪೂರ್ಣ ಮಾನವರಾಗಿ ರೂಪಿಸುವ ನೀತಿಯಾಗಿದೆ ಎಂದು ಅವರು ಬಣ್ಣಿಸಿದರು.

ಸದ್ಯದಲ್ಲೇ ಈ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವುದಾಗಿ ಅವರು ಹೇಳಿದರು.

ಕೊರೊನಾ ನಡುವೆಯೇ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಇದಕ್ಕೆ ಮುಖ್ಯಮಂತ್ರಿಗಳು ನೀಡಿದ ನೆರವು, ಬೆಂಬಲ ಕಾರಣ. ಇದರ ಶ್ರೇಯ ಪೂರ್ಣ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲುತ್ತದೆ ಎಂದರು.

ಕರ್ನಾಟಕದಲ್ಲಿ ಎಂಟೂವರೆ ಲಕ್ಷ ಎಸ್‌ಎಸ್‌ಎಲ್‌ಸಿ ವಿದ್ಯಾರ್ಧಿಗಳಿಗೆ ಯಶಸ್ವಿಯಾಗಿ ಪರೀಕ್ಷೆ ನಡೆಸಿರುವುದ ಜೆ ಇ ಇ ಮತ್ತು ನೀಟ್ ಪರೀಕ್ಷೆಗಳನ್ನು ಅದೇ ಮಾದರಿಯಲ್ಲಿ ನಡೆಸಬಹುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಶಿಕ್ಷಣ ಇಲಾಖೆಯಲ್ಲಿ ತಂತ್ರಜ್ಞಾನ ಆಧರಿತ ಉಪಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ. ಇದರಿಂದ ಶಿಕ್ಷಕರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಅವರು ಕಛೇರಿ ಕೆಲಸಗಳಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಅವರು ತಿಳಿಸಿದರು.

- Advertisement -

Leave A Reply

Your email address will not be published.