ಶಿವಮೊಗ್ಗ: ನಗರದ ಅಲ್ಲಮ ಪ್ರಭು ಮೈದಾನದಲ್ಲಿ 'ಕರ್ನಾಟಕ ಪಬ್ಲಿಕ್ ಶಾಲೆಗಳ' (KPS) ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಕೋಟ್ಯಂತರ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ರಾಜ್ಯ ಮಟ್ಟದ ಬೃಹತ್ ಕಾರ್ಯಕ್ರಮ ಸಂಘಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಂತನೆ ನಡೆಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕಾರ್ಯಕ್ರಮದ ದಿನಾಂಕವನ್ನು ಮುಖ್ಯಮಂತ್ರಿಗಳು ಶೀಘ್ರದಲ್ಲೇ ಅಂತಿಮಗೊಳಿಸಲಿದ್ದಾರೆ ಎಂದು ಅವರು ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಹೇಳಿದರು.
ಕೆಪಿಎಸ್ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳು ಪ್ರಗತಿಯಲ್ಲಿರುವಂತೆಯೇ, ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗುತ್ತಿದೆ. ಪ್ರತಿ ಕೆಪಿಎಸ್ ಶಾಲೆಗೆ ಮೂಲಸೌಕರ್ಯ ಕಲ್ಪಿಸಲು ₹3 ರಿಂದ ₹9 ಕೋಟಿ ವೆಚ್ಚ ಮಾಡಲು ಇಲಾಖೆ ಸಿದ್ಧವಿದ್ದು, ಅಗತ್ಯವಿರುವ ಎಲ್ಲಾ ಶಿಕ್ಷಕರ ನೇಮಕಾತಿ ಹಾಗೂ ಶಾಲಾ ಮಕ್ಕಳಿಗೆ ಸಾರಿಗೆಗಾಗಿ ಉಚಿತ ಬಸ್ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಆತಂಕ ಸೃಷ್ಟಿಸಿರುವ ಕಸ್ತೂರಿರಂಗನ್ ವರದಿ ಜಾರಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಜನಪ್ರತಿನಿಧಿಗಳು, ಹೋರಾಟಗಾರರು ಹಾಗೂ ತಜ್ಞರೊಂದಿಗೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು. ಸೆಪ್ಟೆಂಬರ್ 21 ರಿಂದ ನಡೆಯಲಿರುವ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಕಸ್ತೂರಿರಂಗನ್ ವರದಿ, ಅರಣ್ಯ ಸಮಸ್ಯೆಗಳು ಹಾಗೂ ಶರಾವತಿ ಯೋಜನಾ ಸಂತ್ರಸ್ತರ ಪುನರ್ವಸತಿ ಕುರಿತು ಚರ್ಚಿಸಲಾಗುವುದು ಎಂದರು. ಇದೇ ಮೊದಲ ಬಾರಿಗೆ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ನೋಟ್‌ಬುಕ್ ಹಾಗೂ ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ-ಸಾಕ್ಸ್ ವಿತರಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.