ಬೆಂಗಳೂರು : ಕರ್ನಾಟಕದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ‘ಅಧ್ಯಯನ ವರದಿ-2025’ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಂದು ಸ್ವೀಕರಿಸಿದರು.
ಅಂಜುಮನ್ ತರ್ಖಿ ಉರ್ದು (ಹಿಂದ್), ಕರ್ನಾಟಕ, ಬೆಂಗಳೂರು ವತಿಯಿಂದ ಸಿದ್ಧಪಡಿಸಲಾಗಿರುವ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರ ಕಚೇರಿಯಲ್ಲಿ ಸಚಿವರಿಗೆ ಹಸ್ತಾಂತರಿಸಲಾಯಿತು.
ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು, ಶೈಕ್ಷಣಿಕ ಗುಣಮಟ್ಟ ಸುಧಾರಣೆ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಿರುವ ವರದಿಯನ್ನು ಸಚಿವರು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್, ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ಜಮೀರ್ ಅಹಮದ್, ಶಾಸಕರಾದ ಎನ್.ಎ. ಹ್ಯಾರಿಸ್, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯೆ ಬಿಲ್ಕಿಷ್ ಬಾನು ಸೇರಿದಂತೆ ಇತರರು ಉಪಸ್ಥಿತರಿದ್ದರು.