ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಕಾರ್ಯಾಚಾರಣೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ 13 ಕೆಜಿಗೂ ಅಧಿಕ ಗಾಂಜಾ ಪತ್ತೆಯಾಗಿದೆ.
ಮತ್ತೊಂದೆಡೆ ಮಂಗಳೂರಿನಲ್ಲಿ ನಡೆದ ಪೊಲಿಸರ ಕಾರ್ಯಾಚರಣೆಯಲ್ಲಿ ಗಾಂಜಾ ಸಮೇತ ಆರೋಪಿಯೊಬ್ಬ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಎರಡೂ ಪ್ರಕರಣಗಳಲ್ಲಿ ಒಟ್ಟು 16 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನಡೆಸಿಇದ ಕಾರ್ಯಾಚರಣೆಯಲ್ಲಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಅನಾಮಧೇಯವಾಗಿ ಬಿಟ್ಟು ಹೋಗಿದ್ದ ಚೀಲವನ್ನು ತಪಾಸಣೆ ನಡೆಸಿದಾಗ 13.41 ಕೆಜಿ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಅಬಕಾರಿ ಅಧಿಕಾರಿಗಳು ಸಾಮಾನ್ಯ ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬೀಳುವ ಭೀತಿಯಿಂದ ಪೆಡ್ಲರ್‌ಗಳು ಗಾಂಜಾ ಚೀಲವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಅಧಿಕಾರಿಗಳು ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮಂಗಳೂರಿನ ಮೇರಿಹಿಲ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚೇರಿ ನಿವಾಸಿ ಇರ್ಷಾದ್ ಬಂಧಿತ ಆರೋಪಿ.
ಬಂಧಿತನಿಂದ ಅಂದಾಜು 1.56 ಲಕ್ಷ ರೂ. ಮೌಲ್ಯದ 3.13 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.