ಬೆಂಗಳೂರು: ಜೂನ್ 3ರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.
ಶಾಸಕ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾದ ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಿದ್ದು, ಜಿ. ಪರಮೇಶ್ವರ್ ಅನುಮೋದನೆ ನೀಡಿದ್ದಾರೆ. ಇದಕ್ಕೆ ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರ ಜೊತೆಗೂಡಿ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಬಳಿ ಸಿಎಲ್‍ಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇದನ್ನು ಪರಿಗಣಿಸಿದ ರಾಜ್ಯಪಾಲರು ಸರ್ಕಾರ ರಚನೆಗೆ ಡಿ.ಕೆ. ಶಿವಕುಮಾರ್ ಗೆ ಆಹ್ವಾನ ನೀಡಿದ್ದಾರೆ. ಅಂತೆಯೇ ಜೂನ್ ಮೂರರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಲೋಕಭವನದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
