ಬೆಂಗಳೂರು: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ, ಕೋಮುಗಲಭೆ ಪ್ರಕರಣ ಸೇರಿದಂತೆ ಹಲವು ರಾಜಕಾರಣಿಗಳು, ರೈತ ಪರ, ಕನ್ನಡಪರ ಹೋರಾಟಗಾರರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರ್ಕಾರದ ಆದೇಶ ರದ್ದು ಕೋರಿ ಗಿರೀಶ್ ಭಾರದ್ವಾಜ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ, ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಗುರುವಾರ ಈ ಮಧ್ಯಂತರ ಆದೇಶ ನೀಡಿದೆ.
ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಪ್ರಾಸೀಕ್ಯೂಷನ್ ನಿರ್ದೇಶನಾಲಯದ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೂರನೇ ಪ್ರತಿವಾದಿ ಹಾಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಗೆ ನೋಟಿಸ್ ಜಾರಿಗೊಳಿಸಲು ನಿರಾಕರಿಸಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ, ಕೋಮು ಗಲಭೆ ಸೇರಿದಂತೆ ಹಲವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣ ಹಿಂಪಡೆಯಲು 2026ರ ಮೇ 21ರಂದು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿತ್ತು. ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಿ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಪಡಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.