ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (PDS) ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ (BPL) ಮತ್ತು ಅಂತ್ಯೋದಯ (AAY) ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಸರಕಾರ ಪ್ರಮುಖ ಸೂಚನೆಯೊಂದನ್ನು ನೀಡಿದೆ. ಈ ಹಿಂದೆ ಇ-ಕೆವೈಸಿ (e-KYC) ಮಾಡಿಸಿ 5 ವರ್ಷಗಳು ಪೂರ್ಣಗೊಂಡಿದ್ದರೆ, ಅಂತಹ ಫಲಾನುಭವಿಗಳು ಕಡ್ಡಾಯವಾಗಿ ಮತ್ತೆ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರವು ಇದೀಗ ಅಕ್ಟೋಬರ್ 20ರವರೆಗೆ ಕಾಲಾವಕಾಶವನ್ನು ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿದೆ.
ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿ ನಿಗದಿಯಾಗಿತ್ತು. ಆದರೆ, ಇನ್ನೂ ಹಲವು ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಅಕ್ಟೋಬರ್ 20ರವರೆಗೆ ಗಡುವನ್ನು ವಿಸ್ತರಿಸಲಾಗಿದೆ. ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಉಚಿತ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಫಲಾನುಭವಿಗಳು ತಕ್ಷಣವೇ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಕೋರಿದೆ.
ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇರುವ ಪಡಿತರ ಚೀಟಿದಾರರ ಪಟ್ಟಿಯನ್ನು ಆಯಾ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಈಗಾಗಲೇ ತಲುಪಿಸಲಾಗಿದೆ. ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗೆ ತೆರಳಿ ಈ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂದು ಪರಿಶೀಲಿಸಿಕೊಳ್ಳಬಹುದು. ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಊರು ಬಿಟ್ಟು ಬೇರೆಡೆಗೆ ಅಥವಾ ನಗರಗಳಿಗೆ ವಲಸೆ ಹೋಗಿರುವ ಪಡಿತರ ಚೀಟಿದಾರರು ಸಹ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಸ್ಥಿತಿಯನ್ನು (Status) ಪರಿಶೀಲಿಸಿ, ತಕ್ಷಣವೇ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ನ್ಯಾಯಬೆಲೆ ಅಂಗಡಿಗಳಿಗೆ ತೆರಳಲು ಸಾಧ್ಯವಾಗದವರಿಗೆ ಸರ್ಕಾರ ಮತ್ತೊಂದು ಸುಲಭ ಉಪಾಯವನ್ನು ನೀಡಿದೆ. ಸಾರ್ವಜನಿಕರು ತಮ್ಮ ಮೊಬೈಲ್‌ನ ಪ್ಲೇ ಸ್ಟೋರ್ (Play Store) ನಿಂದ ‘ಅನ್ನಸೇವಾ’ (Anna Seva) ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮನೆಯಲ್ಲಿಯೇ ಸ್ವತಃ ಪಡಿತರ ಚೀಟಿಯ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.
ನೇರವಾಗಿ ಇ-ಕೆವೈಸಿ ಮಾಡಿಸಲು ಬಯಸುವ ಪಡಿತರ ಚೀಟಿದಾರರು, ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ತಮ್ಮ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತೆಗೆದುಕೊಂಡು ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.