ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಹಾಗೂ ಹೊಸ ಸಚಿವ ಸಂಪುಟ ರಚನೆ ವಿಚಾರವಾಗಿ ಪ್ರಕ್ರಿಯೆ ಆರಂಭವಾಗಿದೆ.
ಸಿದ್ದರಾಮಯ್ಯ ಸಂಪುಟದಲ್ಲಿದ್ದ ಶೇ.20ರಷ್ಟು ಸದಸ್ಯರನ್ನು ಡಿ.ಕೆ.ಶಿವಕುಮಾರ್ ಸಂಪುಟದಿಂದ ಹೊರಗಿಡಲು ಕಾಂಗ್ರೆಸ್ ನಿರ್ಧರಿಸಿದೆ. ಜೂನ್ 16ಕ್ಕೂ ಮುನ್ನ ನೂತನ ಸಚಿವ ಸಂಪುಟ ರಚನೆಯಾಗಲಿದೆ.
ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಿಎಲ್ ಪಿ ನಾಯಕರಾಗಿ ಡಿ.ಕೆ.ಶಿವಕುಮಾರ್ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಡಿ.ಕೆ.ಶಿವಕುಮಾರ್ ಹಕ್ಕು ಮಂಡಿಸಲಿದ್ದಾರೆ.
ಹೊಸ ಸರ್ಕಾರ ರಚನೆ ಹಾಗೂ ರಾಜ್ಯ ಘಟಕದ ಪುನಾರಚನೆ ಬಗ್ಗೆ ಕಾಂಗ್ರೆಸ್ ಕಳೆದ ಮೂರ್ನಾಲ್ಕು ತಿಂಗಳಿನಿಂದ ಯೋಜನೆ ರೂಪಿಸಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಸುಮಾರು 20ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ.
ಕಳಪೆ ಸಾಧನೆ ಹಾಗೂ ವಿವಾದಗಳಲ್ಲಿ ಸಿಲುಕಿರುವ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲು ನಿರ್ಧರಿಸಲಾಗಿದೆ. ನೂತನ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.