ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಯನ್ನು 14 ದಿನಗಳ ಕಾಲ ಜಾರಿ ನಿರ್ದೇಶನಾಲಯ (ED) ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಬಸವರಾಜ್ ಕನ್ನಾಳೆಯನ್ನು ED ಅಧಿಕಾರಿಗಳು ಮಂಗಳವಾರ ನಗರದ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿ 14 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಕನ್ನಾಳೆಯನ್ನು 14 ದಿನಗಳ ಕಾಲ ಇ.ಡಿ. ಕಸ್ಟಡಿಗೆ ನೀಡಿ ಆದೇಶಿಸಿದರು.
ಹಗರಣದ ಸಂಬಂಧ ಜ್ಞಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆಯನ್ನು ವಶಕ್ಕೆ ಪಡೆದಿರುವ ಇ.ಡಿ. ಅಧಿಕಾರಿಗಳು ಇಬ್ಬರನ್ನೂ ಮುಖಾಮುಖಿ ಕೂರಿಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈ ಹಗರಣದಲ್ಲಿ ಕೋಟ್ಯಂತರ ರುಪಾಯಿ ಅಕ್ರಮ ಹಣ ವರ್ಗಾವಣೆಯಾಗಿರುವ ಆರೋಪದ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಇ.ಡಿ. ಅಧಿಕಾರಿಗಳು ಆರೋಪಿಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ ಮಹತ್ತರವಾದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.