ಆಫ್ರಿಕಾದ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್ ದೇಶದಲ್ಲಿ ಚಿನ್ನದ ಗಣಿ ಕುಸಿದು ಭೀಕರ ದುರಂತ ಸಂಭವಿಸಿದೆ. ದೇಶದ ಪಶ್ಚಿಮ ಭಾಗದಲ್ಲಿರುವ ಸಣ್ಣ ಗ್ರಾಮದ ಸಮೀಪ ಅಕ್ರಮವಾಗಿ ನಡೆಸಲಾಗುತ್ತಿದ್ದ ಚಿನ್ನದ ಗಣಿ ಕುಸಿದ ಪರಿಣಾಮ 100ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಕ್ಯಾಮರೂನ್ ಗಡಿ ಸಮೀಪದ ಬಾಬೋವಾ ಪಟ್ಟಣದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಜಾಂಬೋಯೆ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಭಾರಿ ಪ್ರಮಾಣದ ಮರಳು ಮತ್ತು ಮಣ್ಣು ಕುಸಿದು ಬಿದ್ದ ಪರಿಣಾಮ ಹಲವರು ಅದರಡಿ ಸಿಲುಕಿಕೊಂಡಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ರೆಡ್‌ಕ್ರಾಸ್ ಸ್ವಯಂಸೇವಕರು ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದುವರೆಗೆ ಅವಶೇಷಗಳಡಿಯಿಂದ 100ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಣಿಯೊಳಗಿನ ಸುರಂಗಗಳು ಕುಸಿದಿರುವುದೇ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಹಲವರ ಬಗ್ಗೆ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಆಫ್ರಿಕಾದ ಹಲವು ಭಾಗಗಳಲ್ಲಿ ಉದ್ಯೋಗದ ಕೊರತೆಯಿಂದಾಗಿ ಸುರಕ್ಷತಾ ಮಾನದಂಡಗಳನ್ನು ಪಾಲಿಸದೆ ಸಣ್ಣ ಪ್ರಮಾಣದ ಗಣಿಗಾರಿಕೆ ನಡೆಸುತ್ತಿರುವುದು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ.