ಮಂಗಳೂರು: ಮಂಗಳೂರು ಹೊರವಲಯದ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತೈಲ ಸಂಸ್ಕರಣಾಗಾರ ಘಟಕದಲ್ಲಿ ಬುಧವಾರ ಮಧ್ಯಾಹ್ನ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಪತ್ತೆಯಾಗಿದ್ದ ಉದ್ಯೋಗಿ ಮನೀಶ್ (30) ಅವರು ದುರಂತವಾಗಿ ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ಅವರ ದೇಹ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬುಧವಾರ ಮಧ್ಯಾಹ್ನ ಸುಮಾರು 12:15ರ ಸುಮಾರಿಗೆ ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ (Coker Hydrotreater unit) ಈ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯು ಎಷ್ಟು ಪ್ರಬಲವಾಗಿತ್ತೆಂದರೆ, ಸುತ್ತಮುತ್ತಲಿನ ಜೋಕಟ್ಟೆ, ಬೈಕಂಪಾಡಿ, ಸುರತ್ಕಲ್ ಮಾತ್ರವಲ್ಲದೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಸಮೀಪದ ಮನೆಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಸ್ಥಳದಲ್ಲಿ ದಟ್ಟ ಕಪ್ಪು ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿತ್ತು.
ಸ್ಥಳದಲ್ಲೇ ಸುಟ್ಟು ಕರಕಲಾದ ಮನೀಶ್
ಸ್ಫೋಟ ಸಂಭವಿಸಿದ ತಕ್ಷಣ ಘಟಕದಲ್ಲಿದ್ದ ಮನೀಶ್ ನಾಪತ್ತೆಯಾಗಿದ್ದರು. ರಕ್ಷಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಘಟನಾ ಸ್ಥಳದ ಅವಶೇಷಗಳ ನಡುವೆ ಮನೀಶ್ ಅವರ ಮೃತದೇಹ ಪತ್ತೆಯಾಗಿದೆ. ದೇಹವು ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದು, ತಕ್ಷಣ ಶವಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು
ದುರಂತದಲ್ಲಿ ಇತರ ಹಲವಾರು ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಕೆಲವರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬೆನ್ನಲ್ಲೇ ಎನ್‌ಎಂಪಿಎ (NMPA), ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ಠಾಣೆಗಳಿಂದ ವಾಹನಗಳು ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ.
ತಾಂತ್ರಿಕ ದೋಷ ಅಥವಾ ಘಟಕದೊಳಗಿನ ತೀವ್ರ ಒತ್ತಡದಿಂದ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ಪತ್ತೆಹಚ್ಚಲು ತಜ್ಞರ ತಂಡ ತನಿಖೆ ಆರಂಭಿಸಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಉನ್ನತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.