ಬೆಂಗಳೂರು : ಪೋಕ್ಸೊ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ.
ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಾಲಯದ ಅನುಮತಿಯಿಲ್ಲದೆ ವ್ಯಾಪ್ತಿ ಬಿಟ್ಟು ತೆರಳಬಾರದು ಎಂದು ವಿಧಿಸಲಾಗಿದ್ದ ಷರತ್ತನ್ನು ಹೈಕೋರ್ಟ್ ಇದೀಗ ಸಡಿಲಿಸಿದೆ. ಈ ಆದೇಶದಿಂದಾಗಿ, ಯಡಿಯೂರಪ್ಪ ಅವರು ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಮುಂಚಿತ ಅನುಮತಿಯ ಅಗತ್ಯವಿಲ್ಲದೆ ದೇಶಾದ್ಯಂತ ಮುಕ್ತವಾಗಿ ಸಂಚರಿಸಬಹುದಾಗಿದೆ.
ಪ್ರಕರಣದ ಹಿನ್ನೆಲೆ: 2024ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿ (CID) ನಡೆಸುತ್ತಿದ್ದು, ದೋಷಾರೋಪಣ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.