ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.
'ನೀವು ಯಾವ ಮಟ್ಟಕ್ಕಾದರೂ ಇಳಿಯಬಲ್ಲಿರಿ' - ನ್ಯಾಯಪೀಠ ತೀವ್ರ ತರಾಟೆ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಸಾಹುಕಾರ್ ಅವರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. "ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ನೇಮಕಾತಿ ವಂಚನೆಯಲ್ಲಿ ಭಾಗಿಯಾಗಿದ್ದೀರಾ? ಅರ್ಹರಲ್ಲದವರನ್ನು ವ್ಯವಸ್ಥೆಯೊಳಗೆ ತಂದರೆ ನಾಳಿನ ಆಡಳಿತ ವ್ಯವಸ್ಥೆ ಏನಾಗಬೇಕು? ಮುಂಬರುವ ಆಡಳಿತಗಾರರನ್ನು ಆಯ್ಕೆ ಮಾಡುವ ಜವಾಬ್ದಾರಿಯಲ್ಲಿದ್ದುಕೊಂಡು ಇಂತಹ ಕೃತ್ಯ ಎಸಗಿದರೆ ಭವಿಷ್ಯದ ಸಮಾಜದ ಸ್ಥಿತಿ ಏನು?" ಎಂದು ಖಾರವಾಗಿ ಪ್ರಶ್ನಿಸಿತು. ಅಲ್ಲದೆ "ನೀವು ಯಾವ ಮಟ್ಟಕ್ಕಾದರೂ ಇಳಿಯಬಲ್ಲಿರಿ" ಎಂದು ಪೀಠವು ಕಿಡಿಕಾರಿತು.
ಸಿಐಡಿ ತನಿಖೆ ಮತ್ತು ಪ್ರಕರಣದ ಹಿನ್ನೆಲೆ:
ಪಶು ಸಂಗೋಪನಾ ಇಲಾಖೆಯ 400 ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಹಾಗೂ ಪ್ರಭಾವಿಗಳಿಗೆ ಮತ್ತು ಸಂಬಂಧಿಕರಿಗೆ ಅಂಕ ನೀಡಲು ಪ್ರಶ್ನೆಪತ್ರಿಕೆ ಸೋರಿಕೆ, ಓಎಂಆರ್ (OMR) ಶೀಟ್ ತಿದ್ದುಪಡಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಐಡಿ (CID) ತನಿಖೆ ನಡೆಸುತ್ತಿದೆ.
ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಿವಶಂಕರಪ್ಪ ಸಾಹುಕಾರ್ ಅವರು ಮೊದಲಿಗೆ 52ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅರ್ಜಿ ವಜಾಗೊಂಡಿದ್ದರಿಂದ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಸಹ ಜಾಮೀನು ನಿರಾಕರಿಸಿ ಅರ್ಜಿಯನ್ನು ತಳ್ಳಿಹಾಕಿದೆ.