ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಗುರುವಾರ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು. ಕಚೇರಿ ಸಮಯದಲ್ಲಿ ಸಂಭವಿಸಿದ ಈ ಸಮಸ್ಯೆಯಿಂದ ಹಲವು ನಿಲ್ದಾಣಗಳಲ್ಲಿ ಪ್ರಯಾಣಿಕರು ಹೆಚ್ಚಿನ ಸಮಯ ಕಾಯಬೇಕಾಯಿತು ಮತ್ತು ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾಯಿತು.
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಾಂತ್ರಿಕ ಸಮಸ್ಯೆ ಉಂಟಾಗಿರುವುದನ್ನು ದೃಢಪಡಿಸಿದ್ದು, ತಕ್ಷಣವೇ ತಾಂತ್ರಿಕ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಿ ದೋಷ ಸರಿಪಡಿಸುವ ಕಾರ್ಯ ಕೈಗೊಳ್ಳಲಾಗಿದೆ. ಕೆಲಕಾಲ ರೈಲುಗಳ ಸಂಚಾರ ನಿಧಾನಗತಿಯಲ್ಲಿ ನಡೆದಿದ್ದು, ಪ್ರಯಾಣಿಕರು ಪರದಾಡಬೇಕಾಯಿತು.
ಈ ಅಡಚಣೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಪರದಾಡಬೇಕಾಯಿತು. ಹಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ದೀರ್ಘ ಸಾಲುಗಳು ಕಂಡುಬಂದವು.ಈ ಹಿಂದೆ ನೇರಳೆ ಮಾರ್ಗದ ರೈಲಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು, ಇದೀಗ ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಸದರಿ ಉಂಟಾದ ಸಮಸ್ಯೆ ಬಗೆಹರಿಸಲು ಮೆಟ್ರೋ ಸಿಬ್ಬಂದಿಗಳು ಮುಂದಾಗಿದ್ದಾರೆ.
BMRCL ಪ್ರಯಾಣಿಕರಲ್ಲಿ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದ್ದು, ತಾಂತ್ರಿಕ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಿ ಸೇವೆಯನ್ನು ಸಂಪೂರ್ಣವಾಗಿ ಸಾಮಾನ್ಯಗೊಳಿಸಲಾಗುವುದು ಎಂದು ತಿಳಿಸಿದೆ.