ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಗಾಳಿ, ಮಳೆಗೆ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
ಮೃತಪಟ್ಟವರು ಬೀದಿಬದಿ ವ್ಯಾಪಾರಿಗಳು ಮತ್ತು ಮಕ್ಕಳಾಗಿದ್ದಾರೆ. ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಬ್ಬರೂ ಮಕ್ಕಳು ಸೇರಿ ಏಳು ಜನ ಸಾವನ್ನಪ್ಪಿದ್ದಾರೆ ಎಂದು ಕಾಂಪೌಂಡ್ ಕುಸಿತದ ದುರಂತದ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ 7 ಜನ ಗಾಯಗೊಂಡಿದ್ದಾರೆ. ಮೃತರ ಕುಟುಂಬದವರಿಗೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ, ಕಾಂಪೌಂಡ್ ಏಕೆ ಬಿತ್ತು ಎಂಬುದರ ಬಗ್ಗೆ ತನಿಖೆಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಮೃತರ ಕುಟುಂಬದವರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆಯ ಬಗ್ಗೆ ಸಿಎಂ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆ ಬಗ್ಗೆ ತನಿಖೆಗೆ ಸೂಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.