ಶಿವಮೊಗ್ಗ: ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರತ್ಯೇಕವಾಗಿ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಷಯವನ್ನು ಹಂಚಿಕೊಂಡರು.
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗಾಗಿ ಸಿಗಂದೂರಿನಲ್ಲಿ ಆಯೋಜಿಸಲಾಗಿದ್ದ ಹತ್ತು ದಿನಗಳ ರಂಗನಾಟಕ ಕಾರ್ಯಕ್ರಮದಲ್ಲಿ ಒಟ್ಟು 10 ಪ್ರಾಥಮಿಕ ಶಾಲೆಗಳ 300 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವರು, ಕಾರ್ಯಕ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲಾಭಿರುಚಿ ಹಾಗೂ ರಂಗಭೂಮಿಯ ಬಗ್ಗೆ ಆಸಕ್ತಿ ಬೆಳೆಸಲು ಇಂತಹ ರಂಗ ತರಬೇತಿಗಳು ಮತ್ತು ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಸಿಗಂದೂರು ಭೇಟಿಗೂ ಮುನ್ನ ಸಚಿವರು ಸೊರಬ ತಾಲ್ಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದರು. ಜಡೆ ಗ್ರಾಮಕ್ಕೆ ತೆರಳಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸೊರಬ ಪಟ್ಟಣದ ಐತಿಹಾಸಿಕ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ನಿಮಿತ್ತ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ವೇಳೆ ಅತ್ಯಂತ ಕಲಾತ್ಮಕವಾಗಿ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಕೆತ್ತಿದ ಶಿಲ್ಪಿಯನ್ನು ಸಚಿವರು ಗೌರವಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು.
ನಂತರ ಸೊರಬ ತಾಲ್ಲೂಕಿನ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ತುರ್ತು ಕಾರಣಗಳಿಂದಾಗಿ ಶ್ರೀ ರೇಣುಕಾಂಬಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದ ಸಚಿವರು, ಈ ಭೇಟಿಯ ವೇಳೆ ದಸರಾ ಸಮಿತಿಯ ಸದಸ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ನಡೆಸುವಂತೆ ಶುಭ ಹಾರೈಸಿದ ಸಚಿವರನ್ನು ದಸರಾ ಸಮಿತಿಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.