ಬಲೂಚಿಸ್ತಾನ: ಪಾಕಿಸ್ತಾನದಲ್ಲಿ ಪ್ರಯಾಣಿಕರ ಬಸ್ ಹಾಗೂ ಎಲ್‌ಪಿಜಿ (LPG) ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಜೀವ ದಹನಗೊಂಡು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 27 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖಾಮುಖಿ ಡಿಕ್ಕಿ, ಕ್ಷಣಾರ್ಧದಲ್ಲಿ ಬೆಂಕಿ
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದರ್ ಜಿಲ್ಲೆಯ ಒರ್ಮರ್ ಸಮೀಪದ ಮಕ್ರಾನ್ ಕರಾವಳಿ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ತುರಬತ್‌ನಿಂದ ಕರಾಚಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್, ಎದುರಿನಿಂದ ಬಂದ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಭೀಕರವಾಗಿ ವ್ಯಾಪಿಸಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ.
ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು
ಅಪಘಾತದ ವೇಳೆ ಬಸ್‌ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬೆಂಕಿಯ ತೀವ್ರತೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬಸ್‌ನಿಂದ 8 ಮೃತದೇಹಗಳು ಹಾಗೂ ಟ್ಯಾಂಕರ್‌ನಿಂದ 2 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಒಟ್ಟು 10 ಮಂದಿ ಸುಟ್ಟು ಕರಕಲಾಗಿದ್ದು, 27 ಮಂದಿ ಗಾಯಗೊಂಡಿದ್ದಾರೆ.
ಹೆದ್ದಾರಿಯಲ್ಲಿ ಕೆಲ ಗಂಟೆಗಳ ಕಾಲ ಸಂಚಾರ ಸ್ಥಗಿತ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಮಕ್ರಾನ್ ಕರಾವಳಿ ಹೆದ್ದಾರಿಯಲ್ಲಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಅಪಘಾತಗಳ ತಾಣವಾಗುತ್ತಿರುವ ಮಕ್ರಾನ್ ಹೆದ್ದಾರಿ
ಮಕ್ರಾನ್ ಕರಾವಳಿ ಹೆದ್ದಾರಿಯಲ್ಲಿ ಈ ಹಿಂದೆಯೂ ಹಲವು ಭೀಕರ ಅಪಘಾತಗಳುಸಂಭವಿಸಿವೆ.ಆಗಸ್ಟ್‌ನಲ್ಲಿ ಒರ್ಮಾರಾ ಬಳಿ ಗ್ಯಾಸ್ ಟ್ಯಾಂಕರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು.ಮಾರ್ಚ್‌ನಲ್ಲಿ: ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗುವೂ ಸೇರಿದಂತೆ 7 ಮಂದಿ ಪ್ರಾಣ ಕಳೆದುಕೊಂಡಿದ್ದರು.ಜನವರಿಯಲ್ಲಿ ಪ್ರಯಾಣಿಕರ ವಾಹನ ಪಲ್ಟಿಯಾಗಿ 10 ಮಂದಿ ಮೃತಪಟ್ಟಿದ್ದರು.ಸತತವಾಗಿ ಸಂಭವಿಸುತ್ತಿರುವ ಅಪಘಾತಗಳಿಂದ ಮಕ್ರಾನ್ ಕರಾವಳಿ ಹೆದ್ದಾರಿಯ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಾಗಿದೆ.