ಬೆಂಗಳೂರು: ಹಿರಿಯೂರು ಶಾಸಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು ಎಂದು ಸಿಎಂ ತಿಳಿಸಿದ್ದಾರೆ.
ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.