ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಜೂನ್ 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ವಿಶೇಷ ವಿಮಾನದ ಮೂಲಕ ಮಂಗಳೂರು ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12:30ಕ್ಕೆ ಆಗಮಿಸಲಿರುವ ವಿಜಯ್ ನಂತರ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ತೆರಳಲಿದ್ದಾರೆ. ಮುಖ್ಯಮಂತ್ರಿಯಾದ ನಂತರ ರಾಜ್ಯಕ್ಕೆ ಇದು ಅವರ ಮೊದಲ ಭೇಟಿಯಾಗಿದೆ.
ಸಿಎಂ ಆದ ಬಳಿಕ ಅವರು ಪ್ರಥಮ ಬಾರಿಗೆ ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಎಂ.ಜಿ. ರಾಮಚಂದ್ರನ್(MGR) ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಚಿನ್ನದ ಖಡ್ಗವನ್ನು ಕಾಣಿಕೆಯಾಗಿ ಅರ್ಪಿಸಿದ್ದರು. ತಮಿಳುನಾಡಿನ ಮತ್ತೊಬ್ಬ ಪ್ರಭಾವಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕೂಡ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಚಂಡಿಕಾಯಾಗಗಳನ್ನು ನೆರವೇರಿಸಿದ್ದರು. ನಟ ರಜನಿಕಾಂತ್ ಮತ್ತು ಸಂಗೀತ ಮಾಂತ್ರಿಕ ಇಳಯರಾಜ ಕೂಡ ಈ ಹಿಂದೆ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು.