ಮಂಗಳೂರು: ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಘಟನೆ ನಡೆದಿದ್ದು, ಇದರಿಂದ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಘಟನೆ ನಡೆದಿದೆ.
ಗಂಜಿಮಠ ಮೂಲದ ಮನೀಶ್ ಪೂಜಾರಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ ಆರೋಪಿ ಮನೀಶ್ ಪೂಜಾರಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.
ತಾನು ಗರ್ಭಿಣಿಯಾದ ವಿಚಾರವನ್ನು ಬಾಲಕಿ ಮನೀಶ್ ಗೆ ತಿಳಿಸಿದ್ದಾಳೆ. ಆದರೆ ಪ್ರೀತಿಯ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿದ್ದ ಆತ ಬಾಲಕಿ ಗರ್ಭಿಣಿಯಾಗಿರುವುದನ್ನು ತಿಳಿದು ಅವಾಚ್ಯ ಪದಗಳಿಂದ ಬೈದು ನಿಂದಿಸಿದ್ದಾನೆ. ಇದರಿಂದ ಮನನೊಂದ ಬಾಲಕಿ ಜೂನ್ 22ರಂದು ತನ್ನ ತಾಯಿಗೆ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಮಗಳಿಗೆ ಧೈರ್ಯ ಹೇಳಿದ ತಾಯಿ ಸಮಾಧಾನಪಡಿಸಿದ್ದಾರೆ.
ಮಂಗಳವಾರ ತಾಯಿ ಕೆಲಸಕ್ಕೆ ಹೋಗಿ ಮನೆಗೆ ಬಂದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮನೀಶ್ ಪೂಜಾರಿ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.