ನವದೆಹಲಿ: ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದ ರಾಜ್ಯದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿನ ಹಸ್ತ ಚಾಚಿದೆ. ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಾಲ್ ಗೆ 1750 ರೂ. ಸಹಾಯಧನ ಘೋಷಿಸಲಾಗಿದೆ.
ಈ ಮೂಲಕ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಅಡಿ 1.30 ಲಕ್ಷ ಮೆಟ್ರಿಕ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಲ್ ಗೆ 1750 ರೂ. ನೆರವು ಘೋಷಿಸಲಾಗಿದೆ.
ಹವಾಮಾನ ವೈಪರಿತ್ಯ ಮತ್ತು ಬೆಲೆ ಕುಸಿತದಿಂದ ಕಂಗಾಲಾದ ಮಾವು ಬೆಳೆಗಾರರು ರಸ್ತೆಗೆ ಮಾವಿನಹಣ್ಣು ಸುರಿದು ಪ್ರತಿಭಟನೆ ನಡೆಸಿದ್ದರು. ಇದು ಗಮನಕ್ಕೆ ಬಂದ ಕೂಡಲೇ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಮತ್ತು ಪ್ರಲ್ಹಾದ್ ಜೋಶಿ ಅವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಬೆಳೆಗಾರರ ನೆರವಿಗೆ ಮನವಿ ಮಾಡಿದ್ದರು.
ನಂತರ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ಮನವೊಲಿಸಿದ್ದರು, ಅಂತೆಯೇ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ತೋತಾಪುರಿ ಮಾವಿಗೆ ಬೆಲೆ ಕೊರತೆ ಪಾವತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ, ಗರಿಷ್ಠ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಾಲ್ ಗೆ 1750 ರೂ. ಸಹಾಯಧನ ಘೋಷಣೆ ಮಾಡಿ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಾಗಿದೆ.
ಇದರಿಂದಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಧಾರವಾಡ, ಬೆಳಗಾವಿ, ವಿಜಯಪುರ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರಿಗೆ ರಿಲೀಫ್ ಸಿಕ್ಕಿದೆ.
ಸಂಕಷ್ಟದಲ್ಲಿದ್ದ ರಾಜ್ಯದ ಮಾವು ಬೆಳೆಗಾರರ ಹಿತ ಕಾಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕ್ರಮ ಕೈಗೊಂಡಿದ್ದಕ್ಕೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಮತ್ತು ಪ್ರಲ್ಹಾದ್ ಜೋಶಿ ಅವರು ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.