ಮುಂಬೈ: ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಮುರುಇದು ಬಿದ್ದಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಶಾಲಾ ವಾಹನದ ಮೇಲೆ ಮರ ಬಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಬಾಲಕನೊಬ್ಬ ಬಸ್‌ನಲ್ಲೇ ಸಿಲುಕಿಕೊಂಡಿದ್ದಾನೆ. ಆತನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 10 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚೆಂಬೂರಿನ 11ನೇ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶಾಲಾ ಬಸ್‌ನಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಮರ ಇದ್ದಕ್ಕಿದ್ದಂತೆ ಬಸ್ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಅಲ್ಲದೇ 10 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.