ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯ ಸರಕಾರ ನೊಂದ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಜತೆಗೆ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಂಥ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.