ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಇಬ್ಬರು ಸಹೋದರರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಕೊಲೆಯಾದ ದುರ್ದೈವಿಗಳು. ಮೃತ ಸಹೋದರರು ಹಾಗೂ ಅವರ ಸಂಬಂಧಿಕರ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ಆರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಉದ್ರಿಕ್ತಗೊಂಡ ಆರು ಜನ ಸಂಬಂಧಿಕರು ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಹೋದರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ, ಮುರಗೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹೋದರರ ಹತ್ಯೆಗೈದು ತಲೆಮರೆಸಿಕೊಂಡಿರುವ ಆರು ಮಂದಿ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.