ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ನಡುವೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚೆನ್ನಮ್ಮ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಸೇರಿದಂತೆ ಹೆಚ್ಡಿ ರೇವಣ್ಣ ಮತ್ತು ಕುಟುಂಬ ಸದಸ್ಯರು ಮಣಿಪಾಲ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಎರಡು ದಿನಗಳ ಹಿಂದೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹೆಚ್.ಡಿ.ಕುಮಾರಸ್ವಾಮಿ ವೈದ್ಯರೊಂದಿಗೆ ಮಾತನಾಡಿ, ತಾಯಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ. ಚೆನ್ನಮ್ಮ ಅವರು ಶೀಘ್ರ ಗುಣಮುಖರಾಗಲಿ ಎಂದು ಕುಟುಂಬಸ್ಥರು ಮತ್ತು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.