ಬೆಂಗಳೂರು: ರಾಜಧಾನಿಯ ಸಂಚಾರ ದಟ್ಟಣೆಯನ್ನು ತಪ್ಪಿಸಿ, ಸಮಯಕ್ಕೆ ಸರಿಯಾಗಿ ವಿಧಾನಸಭೆಯ ವಿಶೇಷ ಅಧಿವೇಶನ ತಲುಪಲು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋದಲ್ಲಿ ಸಾಗಿದ ಅವರು, ಪರಿಸರ ಸಂರಕ್ಷಣೆ ಮತ್ತು ಸಮಯ ಉಳಿತಾಯದ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆ ಬಳಕೆ ಅನಿವಾರ್ಯ ಎಂದು ಜನಸಾಮಾನ್ಯರಿಗೆ ಕರೆ ನೀಡಿದ್ದಾರೆ.
ತಮ್ಮ ಪ್ರಯಾಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, "ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಸುವುದು ಕೇವಲ ಸಮಯದ ಉಳಿತಾಯವಷ್ಟೇ ಅಲ್ಲ, ನಮ್ಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ನಾವಿಡುವ ಪ್ರಮುಖ ಹೆಜ್ಜೆಯಾಗಿದೆ. ಓಜೋನ್ ಪದರ ರಕ್ಷಣೆ, ಕಾರ್ಬನ್ ಹೊರಸೂಸುವಿಕೆ ತಗ್ಗಿಸಿ ಜಾಗತಿಕ ತಾಪಮಾನವನ್ನು ತಡೆಯಲು ನಾವೆಲ್ಲರೂ ಕೈಜೋಡಿಸಬೇಕಿದೆ" ಎಂದು ಕರೆನೀಡಿದ್ದಾರೆ.
ಬೆಂಗಳೂರಿನ ಟ್ರಾಫಿಕ್ ದಟ್ಟಣೆಯ ನಡುವೆ ವಿಧಾನಸಭೆಯ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ತಲುಪಲು ಮೆಟ್ರೋ ಪ್ರಯಾಣ ಅತ್ಯಂತ ಸಹಕಾರಿಯಾಯಿತು ಎಂದು ತಿಳಿಸಿದ ಅವರು, ಮುಂದಿನ ಪೀಳಿಗೆಗೆ ಹಸಿರು ಮತ್ತು ಸ್ವಚ್ಛ ಪರಿಸರವನ್ನು ನೀಡಲು ಪ್ರತಿಯೊಬ್ಬರೂ ಸಾಧ್ಯವಾದಷ್ಟೂ ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಜನಪ್ರತಿನಿಧಿಯೊಬ್ಬರು ಕಾರಿನ ಬದಲು ಮೆಟ್ರೋ ಆಯ್ದುಕೊಂಡು ಸರಳತೆ ಮೆರೆದಿರುವುದಕ್ಕೆ ಮತ್ತು ಪರಿಸರ ಜಾಗೃತಿ ಮೂಡಿಸಿರುವುದಕ್ಕೆ ಸಾರ್ವಜನಿಕರಿಂದ ಹಾಗೂ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.