ಸಾಗರ: ನಗರದ ಶಾಹಿ ಗಾರ್ಮೆಂಟ್ಸ್ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಕಾರ್ಮಿಕರ ಹಿತದೃಷ್ಟಿಯಿಂದ ಅವರ ನ್ಯಾಯಯುತ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಕಾರ್ಖಾನೆಯ ಜನರಲ್ ಮ್ಯಾನೇಜರ್ (GM), ಮಾನವ ಸಂಪನ್ಮೂಲ (HR) ವಿಭಾಗದ ಮುಖ್ಯಸ್ಥರು ಸೇರಿದಂತೆ ಪ್ರಮುಖ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ವೇಳೆ ಕಾರ್ಮಿಕರು ಎದುರಿಸುತ್ತಿರುವ ವೇತನ, ಕಾರ್ಯಸ್ಥಳದ ಸೌಲಭ್ಯ ಹಾಗೂ ಭವಿಷ್ಯ ನಿಧಿ (PF) ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಪಿಎಫ್ ಸಮಸ್ಯೆಗೆ ಕೇಂದ್ರಕ್ಕೆ ಪತ್ರ:
ಗಾರ್ಮೆಂಟ್ಸ್ ಕಾರ್ಮಿಕರು ಎದುರಿಸುತ್ತಿರುವ ಪಿಎಫ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಈ ಕುರಿತು ಕೇಂದ್ರ ಕಾರ್ಮಿಕ ಸಚಿವಾಲಯ ಹಾಗೂ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದು ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.
ಸ್ಥಳೀಯವಾಗಿ ಆಡಳಿತ ಮಂಡಳಿ ಹಂತದಲ್ಲಿ ಬಗೆಹರಿಯಬೇಕಾದ ವಿಚಾರಗಳನ್ನು ತಕ್ಷಣವೇ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸಲಹೆ ನೀಡಿದರು.
ಶೀಘ್ರದಲ್ಲೇ ತ್ರಿಪಕ್ಷೀಯ ಮಾತುಕತೆ:
ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಶಾಹಿ ಗಾರ್ಮೆಂಟ್ಸ್ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ನೌಕರರ ಪ್ರತಿನಿಧಿಗಳನ್ನು, ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ಒಟ್ಟಿಗೆ ಸೇರಿಸಿ ಜಂಟಿ ಸಭೆ ನಡೆಸುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಕಾರ್ಮಿಕರ ಹಿತರಕ್ಷಣೆಗೆ ಸದಾ ಬದ್ಧವಾಗಿದ್ದು, ಅವರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು