ಸಾಗರ: ಮುಂಬರುವ ತಾಲ್ಲೂಕು ಪಂಚಾಯಿತಿ ಚುನಾವಣೆಯ ಕಣ ರಂಗೇರುತ್ತಿದ್ದು, ಕಲ್ಮನೆ ಹಾಗೂ ಎಡಜಿಗಳಮನೆ ವ್ಯಾಪ್ತಿಯನ್ನು ಒಳಗೊಂಡ ತಾಲ್ಲೂಕು ಪಂಚಾಯಿತಿ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಕಲ್ಮನೆ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಹೊಸೂರು ಅವರು ಪ್ರಬಲ ಟಿಕೆಟ್ ಆಕಾಂಕ್ಷಿ ಎಂಬುದಾಗಿ ಹೇಳಲಾಗುತ್ತಿದೆ.
ಕಲ್ಮನೆ ಗ್ರಾಮ ಪಂಚಾಯ್ತಿಯ ಹೊಸೂರು ವಾರ್ಡ್‌ನಿಂದ ಸದಸ್ಯರಾಗಿ ಆಯ್ಕೆಯಾಗಿ, ಆ ಬಳಿಕ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಯಶಸ್ವಿಯಾಗಿ ಆಡಳಿತ ನಡೆಸಿದ ಅನುಭವ ಹೊಂದಿರುವ ಸುರೇಶ್ ಶೆಟ್ಟಿ ಅವರು, ತಮ್ಮ ಅವಧಿಯಲ್ಲಿ ಕೈಗೊಂಡ ಜನಪರ ಕಾಮಗಾರಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಅಪಾರ ಮೆಚ್ಚುಗೆ ಗಳಿಸಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ: ಮತದಾರರ ಮೆಚ್ಚುಗೆ
ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ‘ಜಲ್ ಜೀವನ್ ಮಿಷನ್’ (ಜೆಜೆಎಂ) ಕಾಮಗಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿ, ಶೇ.80 ರಿಂದ 90ರಷ್ಟು ಕಾರ್ಯವನ್ನು ಪೂರ್ಣಗೊಳಿಸಿ ಪ್ರತಿಯೊಬ್ಬರಿಗೂ ನೀರಿನ ಸೌಲಭ್ಯ ದೊರಕುವಂತೆ ಶ್ರಮಿಸಿದ್ದಾರೆ.
ಇದರೊಂದಿಗೆ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳ ನಿರ್ಮಾಣ, ಪಂಚಾಯಿತಿ ವ್ಯಾಪ್ತಿಯ ಬಸ್ ತಂಗುದಾಣಗಳಿಗೆ ಸುಣ್ಣ-ಬಣ್ಣ ಬಳಿದು ನವೀಕರಣ ಹಾಗೂ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡು ಗ್ರಾಮೀಣ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡುವ ಮೂಲಕ ಮಾದರಿ ಆಡಳಿತ ನೀಡಿದ್ದರು.
ಪಕ್ಷದ ಮುಖಂಡರೊಂದಿಗೆ ನಿಕಟ ಸಂಪರ್ಕ
ಕಳೆದ ಹಲವು ವರ್ಷಗಳಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಸುರೇಶ್ ಶೆಟ್ಟಿ ಅವರು, ಮಾಜಿ ಸಚಿವ ಹರತಾಳು ಹಾಲಪ್ಪ ಅವರಂತಹ ಹಿರಿಯ ನಾಯಕರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಪಕ್ಷ ನೀಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ ಬಂದಿರುವ ಅವರು, ಈ ಬಾರಿ ಪಕ್ಷದಿಂದ ತಮಗೆ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
ತಾಲ್ಲೂಕು ಪಂಚಾಯಿತಿಗೆ ಸ್ಪರ್ಧಿಸಲು ಜನರ ಒತ್ತಾಯ
ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಜನರೊಂದಿಗೆ ಇಟ್ಟುಕೊಂಡಿರುವ ಉತ್ತಮ ಬಾಂಧವ್ಯದಿಂದಾಗಿ, ಕ್ಷೇತ್ರದ ಮತದಾರರೇ ತಾಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಪ್ರೀತಿಯ ಒತ್ತಡ ಹೇರುತ್ತಿದ್ದಾರೆ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಆಶೀರ್ವದಿಸಿ ಅವಕಾಶ ನೀಡಿದರೆ, ಕಲ್ಮನೆ ಮತ್ತು ಎಡಜಿಗಳಮನೆ ವ್ಯಾಪ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಕಲ್ಮನೆ ಮತ್ತು ಎಡಜಿಗಳಮನೆ ವ್ಯಾಪ್ತಿಯ ಜನರ ನಾಡಿಮಿಡಿತ ಅರಿತಿರುವ, ಜನಸಾಮಾನ್ಯರ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸುವ ಸುರೇಶ್ ಶೆಟ್ಟಿ ಅವರಿಗೆ ಈ ಬಾರಿ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂಬ ಕೂಗು ಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಬಲವಾಗಿ ಕೇಳಿಬರುತ್ತಿದೆ. ಆ ಮೂಲಕ ಸುರೇಶ್ ಶೆಟ್ಟಿ ಅವರು ಈ ಬಾರಿಯ ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಕಲ್ಮನೆ-ಎಡಜಿಗಳಮನೆ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದೇ ಹೇಳಲಾಗುತ್ತಿದೆ.
ಸುರೇಶ್ ಶೆಟ್ಟಿ ಅವರ ಅಭಿಮಾನಿಗಳ ಕೂಗಿಗೆ ಬಿಜೆಪಿಯ ನಾಯಕರು ಮಣೆ ಹಾಗುತ್ತಾರಾ? ಈ ಬಾರಿಯ ಕಲ್ಮನೆ-ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು...