ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿ ಬಳಿ ಇರುವ ಗೀತಂ (GITAM) ವಿಶ್ವವಿದ್ಯಾಲಯದ ಆವರಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 20 ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ವಾರ್ಷಿತಾ ಬಹುಮಹಡಿ ಕಟ್ಟಡದ 6ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶ ಮೂಲದ ಈ ವಿದ್ಯಾರ್ಥಿನಿಯು ವಿಶ್ವವಿದ್ಯಾಲಯದಲ್ಲಿ ಮೂರನೇ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದು, ತಡರಾತ್ರಿ ಕಟ್ಟಡದಿಂದ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವಿದ್ಯಾರ್ಥಿನಿ ವಾರ್ಷಿತಾ ಅವರು ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ (Depression) ಒಳಗಾಗಿದ್ದರು ಎನ್ನಲಾಗಿದ್ದು, ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ವಿಶ್ವವಿದ್ಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.