ಲ್ಯಾಂಗ್ಲಿ- ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಲ್ಯಾಂಗ್ಲಿ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಭಾರತೀಯ ಮೂಲದ 25 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಇದು ಪೂರ್ವಯೋಜಿತ ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತನನ್ನು ಸರ್ರೆ ನಿವಾಸಿ ತುಷಾರ್ ಶರ್ಮಾ ಎಂದು ಗುರುತಿಸಲಾಗಿದ್ದು, ಪ್ರಕರಣದ ಕುರಿತು ಕೆನಡಾ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.
ಅಕ್ಟೋಬರ್ 29ರಂದು ರಾತ್ರಿ ಸುಮಾರು 10.30ರ ವೇಳೆಗೆ ಲ್ಯಾಂಗ್ಲಿಯ ರಾವ್ಲಿನ್ಸನ್ ಕ್ರೆಸೆಂಟ್ ಪ್ರದೇಶದಲ್ಲಿ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಲ್ಯಾಂಗ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಕಾರಿನೊಳಗೆ ಮಾನವ ಅವಶೇಷಗಳು ಪತ್ತೆಯಾಗಿದ್ದವು.
ಘಟನೆಯ ಗಂಭೀರತೆಯನ್ನು ಪರಿಗಣಿಸಿ ಕೆನಡಾದ ಇಂಟಿಗ್ರೇಟೆಡ್ ಹೋಮಿಸೈಡ್ ಇನ್ವೆಸ್ಟಿಗೇಷನ್ ಟೀಮ್ (IHIT) ತನಿಖೆಯ ಜವಾಬ್ದಾರಿ ವಹಿಸಿಕೊಂಡಿದೆ. ಲ್ಯಾಂಗ್ಲಿ ಆರ್‌ಸಿಎಂಪಿ, ವಿಧಿವಿಜ್ಞಾನ ತಜ್ಞರು ಹಾಗೂ ಬಿ.ಸಿ. ಕೊರೋನರ್ಸ್ ಸೇವೆಯ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿದ್ದಾರೆ.
ನಿರ್ದಿಷ್ಟವಾಗಿ ಗುರಿಯಾಗಿಸಿ ಹತ್ಯೆ?
ತುಷಾರ್ ಶರ್ಮಾ ಅವರ ಸಾವಿನ ಹಿಂದಿನ ಉದ್ದೇಶ ಇನ್ನೂ ಬಹಿರಂಗವಾಗಿಲ್ಲ. ಆದರೆ ಅವರನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವ ಸಾಧ್ಯತೆಯನ್ನು ತನಿಖಾಧಿಕಾರಿಗಳು ತಳ್ಳಿಹಾಕಿಲ್ಲ. ಅವರಿಗೆ ಯಾರೊಂದಿಗಾದರೂ ವೈಯಕ್ತಿಕ ದ್ವೇಷವಿತ್ತೇ ಅಥವಾ ಹತ್ಯೆಯ ಹಿಂದೆ ಬೇರೆ ಕಾರಣಗಳಿವೆಯೇ ಎಂಬ ನಿಟ್ಟಿನಲ್ಲಿ ಪರಿಶೀಲನೆ ನಡೆಯುತ್ತಿದೆ.
ಶರ್ಮಾ ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇರಲಿಲ್ಲ ಮತ್ತು ಕೆನಡಾದಲ್ಲಿ ಅವರ ಸಾಮಾಜಿಕ ಸಂಪರ್ಕವೂ ಸೀಮಿತವಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಅವರ ವೈಯಕ್ತಿಕ ಜೀವನ, ದೈನಂದಿನ ಚಟುವಟಿಕೆಗಳು ಹಾಗೂ ಸಾವಿಗೂ ಮುನ್ನ ಯಾರನ್ನು ಸಂಪರ್ಕಿಸಿದ್ದರು ಎಂಬುದರ ಕುರಿತು ಕುಟುಂಬಸ್ಥರು ಮತ್ತು ಸ್ನೇಹಿತರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಹತ್ಯೆಯಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದರು, ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿಗೆ ಬೆಂಕಿ ಹಚ್ಚಲಾಗಿದೆಯೇ ಎಂಬುದನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳು, ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಅಥವಾ ಇತರ ಮಾಹಿತಿಗಳು ಲಭ್ಯವಿದ್ದರೆ ಪೊಲೀಸರಿಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ಹತ್ಯೆಯ ಹಿಂದಿನ ರಹಸ್ಯ ಭೇದಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.