ಹೈದರಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಹೈದರಾಬಾದ್‌ನಲ್ಲಿರುವ ಮೆಟಾ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಚೇರಿ ಆವರಣದಲ್ಲಿನ ಹೂವಿನ ಕುಂಡಗಳು ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿರುವ ಆರೋಪ ಕೇಳಿಬಂದಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ‘ಗೂಂಡಾಗಳ ಪಕ್ಷ’ ಎಂದು ಟೀಕಿಸಿದೆ.
ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಜಕ್ಕಿಡಿ ಶಿವಚರಣ್ ರೆಡ್ಡಿ ನೇತೃತ್ವದಲ್ಲಿ ಶುಕ್ರವಾರ ಈ ಪ್ರತಿಭಟನೆ ನಡೆದಿದೆ. ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ನಲ್ಲಿ ಹಲವು ಕಾಂಗ್ರೆಸ್ ನಾಯಕರ ಖಾತೆಗಳನ್ನು ಅಮಾನತುಗೊಳಿಸಿದೆ ಹಾಗೂ ಪ್ರಮುಖ ನಾಯಕರ ಪೋಸ್ಟ್‌ಗಳನ್ನು ತೆಗೆದುಹಾಕಿದೆ ಎಂಬುದು ಪ್ರತಿಭಟನಾಕಾರರ ಆರೋಪವಾಗಿದೆ. ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ರಾಷ್ಟ್ರೀಯ ಉಸ್ತುವಾರಿ ಮನೀಶ್ ಶರ್ಮಾ ಅವರ ಖಾತೆಗಳು ಹಾಗೂ ಪೋಸ್ಟ್‌ಗಳ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಪೊಲೀಸರ ಪ್ರಕಾರ, ಸುಮಾರು 25 ಯುವ ಕಾಂಗ್ರೆಸ್ ಕಾರ್ಯಕರ್ತರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೈದರಾಬಾದ್‌ನ ಸ್ಕೈ ವ್ಯೂ ಆವರಣದಲ್ಲಿರುವ ಮೆಟಾ ಕಚೇರಿಗೆ ಪ್ರವೇಶಿಸಿದ್ದಾರೆ. ಫಲಕಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಚೇರಿ ಕಾರಿಡಾರ್‌ಗಳಲ್ಲಿ ಓಡಾಡಿ, ಹೂವಿನ ಕುಂಡಗಳು ಹಾಗೂ ಇತರ ವಸ್ತುಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಚೇರಿ ಆವರಣದ ಹೊರಭಾಗದಲ್ಲಿಯೂ ಹೂವಿನ ಕುಂಡವನ್ನು ಒಡೆದುಹಾಕಿರುವ ದೃಶ್ಯಗಳು ಕಂಡುಬಂದಿವೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸುಮಾರು 20ರಿಂದ 21 ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಬಳಿಕ ಸುಮಾರು ಮೂರು ಗಂಟೆಗಳ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಪ್ರತಿಭಟನಾಕಾರರು ಮೆಟಾ ಸಂಸ್ಥೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಸಾಮಾಜಿಕ ಜಾಲತಾಣಗಳ ನಿರ್ವಹಣೆಯಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಮೆಟಾಗೆ ಏಳು ದಿನಗಳ ಗಡುವು
ಇದೇ ವಿಚಾರವಾಗಿ ಭಾರತೀಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೆಟಾ ಸಂಸ್ಥೆಗೆ ಎಚ್ಚರಿಕೆ ನೀಡಿದೆ. ನಿರ್ಬಂಧಿತ ಖಾತೆಗಳು ಮತ್ತು ತೆಗೆದುಹಾಕಿರುವ ಪೋಸ್ಟ್‌ಗಳನ್ನು ಏಳು ದಿನಗಳೊಳಗೆ ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದೆ. ಅಲ್ಲದೆ, ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಖಾತೆಗಳ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದೆ.
‘ಬಿಜೆಪಿಯ ಮುಂಚೂಣಿ ಸಂಘಟನೆಯಂತೆ ವರ್ತಿಸುವುದನ್ನು ಬಿಟ್ಟು, ತಟಸ್ಥ ವೇದಿಕೆಯಾಗಿ ಕಾರ್ಯನಿರ್ವಹಿಸಿ. ಮೆಟಾ ಬೆನ್ನುಮೂಳೆಯನ್ನು ಬೆಳೆಸಿಕೊಳ್ಳಬೇಕು. ಭಾರತವು ಮೋದಿಯವರ ಖಾಸಗಿ ಆಸ್ತಿಯಲ್ಲ, ಅದು ಪ್ರಜಾಪ್ರಭುತ್ವದ ರಾಷ್ಟ್ರ’ ಎಂದು ಯುವ ಕಾಂಗ್ರೆಸ್ ತನ್ನ ಪೋಸ್ಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.
ಏಳು ದಿನಗಳೊಳಗೆ ಬೇಡಿಕೆ ಈಡೇರಿಸದಿದ್ದರೆ ನ್ಯಾಯಾಲಯಗಳು, ಬೀದಿಗಳು ಹಾಗೂ ಮೆಟಾ ಕಚೇರಿಗಳ ಮುಂದೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ದೇಶಾದ್ಯಂತ ಮೆಟಾ ಕಚೇರಿಗಳ ಮುಂದೆ ಹೋರಾಟ ನಡೆಸುವುದಾಗಿಯೂ ಸಂಘಟನೆ ಹೇಳಿದೆ. ಹೈದರಾಬಾದ್ ಮಾತ್ರವಲ್ಲದೆ ಮುಂಬೈ ಮತ್ತು ಗುರುಗ್ರಾಮ್‌ನಲ್ಲಿಯೂ ಯುವ ಕಾಂಗ್ರೆಸ್ ಘಟಕಗಳು ಇದೇ ವಿಚಾರವಾಗಿ ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ. ಮುಂಬೈನಲ್ಲಿ ಪ್ರತಿಭಟನಾಕಾರರು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ-ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರ ಪೋಸ್ಟರ್‌ಗೂ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಗೂಂಡಾಗಳ ಪಕ್ಷ ಎಂದ ಬಿಜೆಪಿ
ಮೆಟಾ ಕಚೇರಿಯಲ್ಲಿ ನಡೆದ ಘಟನೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ಕಾಂಗ್ರೆಸ್ ಗೂಂಡಾಗಳ ಪಕ್ಷ’ ಎಂದು ಕರೆದಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಹೈದರಾಬಾದ್‌ನ ಮೆಟಾ ಕಚೇರಿಯನ್ನು ಧ್ವಂಸಗೊಳಿಸಿರುವುದಲ್ಲದೆ, ಆ ಘಟನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ವಿಶ್ವ ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಯನ್ನೂ ಪ್ರಸ್ತಾಪಿಸಿರುವ ಭಂಡಾರಿ, ಶೃಂಗಸಭೆಯ ಸಂದರ್ಭದಲ್ಲಿ ಕಾರ್ಯಕರ್ತರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುವ ಮೂಲಕ ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಟೀಕಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಖಾತೆಗಳ ನಿರ್ಬಂಧದ ವಿಚಾರ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮತ್ತೊಂದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಮಾಧ್ಯಮಗಳ ತಟಸ್ಥತೆಯ ಪ್ರಶ್ನೆಯೊಂದಿಗೆ ಆರಂಭವಾದ ವಿವಾದ, ಮೆಟಾ ಕಚೇರಿಯಲ್ಲಿ ನಡೆದ ಧ್ವಂಸ ಪ್ರಕರಣದಿಂದ ಮತ್ತಷ್ಟು ತೀವ್ರಗೊಂಡಿದೆ. ಮೆಟಾ ಸಂಸ್ಥೆಯ ಪ್ರತಿಕ್ರಿಯೆ ಹಾಗೂ ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಕೈಗೊಳ್ಳಲಿರುವ ಕ್ರಮಗಳ ಮೇಲೆ ಈಗ ಎಲ್ಲರ ಗಮನ ನೆಟ್ಟಿದೆ