ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ನೈಋತ್ಯ ಮುಂಗಾರು ಮಾರುತಗಳು ಚುರುಕುಗೊಂಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಘಾಟ್ ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಜಾಗರೂಕರಾಗಿರಲು ಇಲಾಖೆ ಸೂಚಿಸಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕರ್ವಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವೆಡೆ ಭೂಕುಸಿತ, ಗುಡ್ಡ ಕುಸುತದಂತಹ ಅವಘಡಗಳು ಸಂಭವಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚಿಸಿವೆ.
ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣ ಇರಲಿದ್ದು, ನಗರದಾದ್ಯಂತ ತಂಪು ಗಾಳಿ ಬೀಸಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವು ಭಾಗಗಳಲ್ಲಿ ಸಾಧಾರಣದಿಂದ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.