ಬೆಂಗಳೂರು: ಮಹಿಳೆಯರು ಸೇರಿ ರಾಜ್ಯದ ಮೂರು ಕೋಟಿಗೂ ಅಧಿಕ ಸಾರಿಗೆ ಬಸ್ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸೋಮವಾರ 4 ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವರಾದ ಬಳಿಕ ಮೊದಲ ಸಭೆ ನಡೆಸಿದ ಬೈರತಿ ಸುರೇಶ್ ಶಕ್ತಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. ಇದಕ್ಕಾಗಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲಿ ಪುರುಷರಿಗೂ ರೀಚಾರ್ಜ್ ಮಾಡಬಹುದಾದ ಸ್ಮಾರ್ಟ್ ಕಾರ್ಡ್ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆ ಮೂರು ಕೋಟಿ ಜನರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಶಕ್ತಿ ಸ್ಮಾರ್ಟ್ ಕಾರ್ಡ್ ಉಚಿತ ಪ್ರಯಾಣಕ್ಕೆ ಬಳಸಬಹುದಾಗಿದೆ. ಪುರುಷರಿಗೆ ನೀಡುವ ಸ್ಮಾರ್ಟ್ ಕಾರ್ಡ್ ಗಳಿಗೆ ಹಣ ತುಂಬಿ ಅದರ ಮೂಲಕ ಟಿಕೆಟ್ ದರ ಪಾವತಿಸುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಮಹಿಳೆಯರ ಸುರಕ್ಷತೆಗಾಗಿ ಕಾರು, ಟ್ಯಾಕ್ಸಿ ಸೇರಿದಂತೆ ಇನ್ನಿತರ ಸಾರ್ವಜನಿಕ ಸೇವೆ ನೀಡುವ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ವ್ಯವಸ್ಥೆ(VLTS) ಅಳವಡಿಕೆಗೆ ವೇಗ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತಮ ಬಸ್ ಸೇವೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಅನುದಾನದಲ್ಲಿ 1000 ಹೊಸ ಬಸ್ ಗಳನ್ನು ಖರೀದಿಸಲಾಗುವುದು. 4000 ಎಲೆಕ್ಟ್ರಿಕ್ ಬಸ್ ಗಳನ್ನು ನಿಯೋಜಿಸಿ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿಯೋಜಿಸಲಿದ್ದು, ಇವುಗಳನ್ನು ಹಂತ ಹಂತವಾಗಿ ನಾಲ್ಕು ನಿಗಮಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.